ಮುದ್ದೇಬಿಹಾಳ, ಜೂ.24:
ತಾಲೂಕಿನ ನೆಬಗೇರಿ ಗ್ರಾಮದಲ್ಲಿ ಬುಧವಾರ ಸುರಿದ ಅಲ್ಪ ಪ್ರಮಾಣದ ಮಳೆಯಲ್ಲೇ ಅವೈಜ್ಞಾನಿಕವಾಗಿ ನಿರ್ಮಿಸಲಾದ ಚರಂಡಿಯ ಅವ್ಯವಸ್ಥೆ ಬಯಲಾಗಿದೆ. ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಚರಂಡಿ ಉಕ್ಕಿ ಹರಿದು ಕೊಳಚೆ ನೀರು ಹಲವು ಮನೆಗಳಿಗೆ ನುಗ್ಗಿ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸಿದರು.
ಚರಂಡಿ ನೀರು ಮನೆಗಳೊಳಗೆ ನುಗ್ಗಿದ ಪರಿಣಾಮ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದ್ದು, ದುರ್ವಾಸನೆ ಹಾಗೂ ಅನೈರ್ಮಲ್ಯದ ವಾತಾವರಣದಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಅಲ್ಪ ಮಳೆಯಲ್ಲೇ ಈ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಅವೈಜ್ಞಾನಿಕ ಚರಂಡಿ ಕಾಮಗಾರಿಯೇ ಸಮಸ್ಯೆಗೆ ಮೂಲ ಕಾರಣ ಎಂದು ಆರೋಪಿಸಿರುವ ಗ್ರಾಮಸ್ಥರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮರ್ಪಕ ಒಳಚರಂಡಿ ವ್ಯವಸ್ಥೆ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
