ಕಲಬುರಗಿ, ಜು. 7: ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಈ ಭಾಗವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ) ರಾಜ್ಯ ಯುವ ಘಟಕದ ಅಧ್ಯಕ್ಷ ದೇವೇಂದ್ರ ಕೆ. ಚಿಗರಹಳ್ಳಿ ಒತ್ತಾಯಿಸಿದರು.
ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿರುವ ಅವರು, ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ಬೀಜಗಳು ಒಣಗಿ ನಾಶವಾಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿರುವುದರಿಂದ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಮನವಿಯಲ್ಲಿ ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದು, ಪ್ರತಿ ರೈತ ಕುಟುಂಬಕ್ಕೆ ₹10 ಸಾವಿರ ತುರ್ತು ನೆರವು ಒದಗಿಸುವುದು, ವಿಶೇಷ ಪರಿಹಾರ ಪ್ಯಾಕೇಜ್ ಜಾರಿಗೊಳಿಸಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದು, ಬೆಳೆಸಾಲ ವಸೂಲಾತಿಯನ್ನು ಮುಂದೂಡಿ ಬಡ್ಡಿ ಮನ್ನಾ ನೀಡುವುದು, ರೈತರಿಗೆ ಉಚಿತ ಮೇವು, ಕುಡಿಯುವ ನೀರು ಹಾಗೂ ಅಗತ್ಯ ಕೃಷಿ ಸಹಾಯ ಕಲ್ಪಿಸುವುದು ಮತ್ತು ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಲಾಗಿದೆ.
ರಾಜ್ಯದ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಲು ಸರ್ಕಾರವು ರೈತಪರ ಹಾಗೂ ಮಾನವೀಯ ದೃಷ್ಟಿಕೋನದಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದೇವೇಂದ್ರ ಕೆ. ಚಿಗರಹಳ್ಳಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ದೊಡ್ಡಮನಿ, ಕಲಬುರಗಿ ಜಿಲ್ಲಾ ಅಧ್ಯಕ್ಷ ಶ್ರೀಮಂತ ಮಾವನೂರ್, ರಾಜ್ಯ ಯುವ ಸಂಚಾಲಕ ಚಂದ್ರಕಾಂತ್ ಗಂವ್ಹರ್, ಜಿಲ್ಲಾ ಸಂಚಾಲಕ ರವಿ ಡೊಂಗರಗಾವ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
