Tuesday, August 4, 2026
Homeರಾಜ್ಯಪವಾಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ: ಪೊಲೀಸ್ ಇಲಾಖೆಯ ಕಾರ್ಯಕ್ಕೆ ಶಾಸಕ ಸಿ.ಎಸ್. ನಾಡಗೌಡ ಮೆಚ್ಚುಗೆ

ಪವಾಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ: ಪೊಲೀಸ್ ಇಲಾಖೆಯ ಕಾರ್ಯಕ್ಕೆ ಶಾಸಕ ಸಿ.ಎಸ್. ನಾಡಗೌಡ ಮೆಚ್ಚುಗೆ

ಮುದ್ದೇಬಿಹಾಳ, ಜುಲೈ 10: ತಾಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಳ್ಳರ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ಸು ಸಾಧಿಸಿರುವ ಪೊಲೀಸ್ ಇಲಾಖೆ ಹಾಗೂ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಕೃತಜ್ಞತೆ ಸಲ್ಲಿಸಿದ್ದಾರೆ.

ಘಟನೆ ನಡೆದ ದಿನವೇ ರಾಜ್ಯ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪ್ರಕರಣದ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆ. ಅದರಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೊಲೀಸ್ ಅಧಿಕಾರಿಗಳು ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಿದ್ದು, ಕಳ್ಳರ ತಂಡದ ಸುಳಿವು ಪತ್ತೆಹಚ್ಚುವಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್.ಪಿ.) ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಜೊತೆಗೆ ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ ಪವಾಡ ಬಸವೇಶ್ವರರ ಮೂರ್ತಿಯನ್ನು ಶೀಘ್ರದಲ್ಲಿಯೇ ಮರಳಿ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಭಕ್ತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಸಮರ್ಥವಾಗಿ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಭಕ್ತರು ವದಂತಿಗಳಿಗೆ ಕಿವಿಗೊಡದೆ ಶಾಂತತೆ ಕಾಪಾಡುವಂತೆ ಶಾಸಕ ಸಿ.ಎಸ್. ನಾಡಗೌಡ ಮನವಿ ಮಾಡಿದ್ದಾರೆ.

ಹೆಚ್ಚಿನ ಸುದ್ದಿ