
ಬೆಂಗಳೂರು , ಜು. 10:
ನಾಡಹಬ್ಬ ದಸರಾ–2026ನ್ನು ಅತ್ಯಂತ ವಿಜೃಂಭಣೆಯಿಂದ, ಸಂಪ್ರದಾಯಬದ್ಧವಾಗಿ ಹಾಗೂ ಜನಸ್ನೇಹಿಯಾಗಿ ಆಚರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ದಸರಾ ಆಚರಣೆ ಸಂಬಂಧ ನಡೆದ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 11ರಂದು ಬೆಳಿಗ್ಗೆ 10:50ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು ಹಾಗೂ ಅಕ್ಟೋಬರ್ 21ರಂದು ಸಂಜೆ 4:10ಕ್ಕೆ ಜಂಬೂಸವಾರಿ ನಡೆಯಲಿದೆ ಎಂದು ಘೋಷಿಸಿದರು.
ಅಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ ನೀಡಲಾಗುವುದು ಎಂದರು.ಸಭೆಯಲ್ಲಿ ದಸರಾ ಸಿದ್ಧತೆ ಕುರಿತು ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ, ಮೈಸೂರು ದಸರಾ ಇತಿಹಾಸ, ಪರಂಪರೆ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಯಾವುದೇ ಧಕ್ಕೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ನಿರ್ದೇಶಿಸಿದರು.
ದಸರಾ ಸಂದರ್ಭದಲ್ಲಿ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು.
ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ವಸತಿ, ಸಾರಿಗೆ ಮತ್ತು ಮಾಹಿತಿ ವ್ಯವಸ್ಥೆ ಕಲ್ಪಿಸಬೇಕು ಎಂದರು.ಜಂಬೂಸವಾರಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಮಾರಂಭಗಳಿಗೆ ಬರುವ ಜನರ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್, ಸಂಚಾರ ವ್ಯವಸ್ಥೆ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಸಜ್ಜುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯುತ್ ಅಲಂಕಾರವನ್ನು ಸುರಕ್ಷತಾ ನಿಯಮಗಳನ್ನು ಪಾಲಿಸಿಕೊಂಡು ವೈಭವಯುತವಾಗಿ ರೂಪಿಸುವಂತೆಯೂ ಸೂಚಿಸಿದರು.ಇದೇ ವೇಳೆ ಜಿಲ್ಲೆಯ ಕಲಾವಿದರು, ಜನಪದ ತಂಡಗಳು ಹಾಗೂ ಸಾಂಸ್ಕೃತಿಕ ಸಂಘಟನೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿ, ದಸರಾ ಆಯೋಜನಾ ಸಮಿತಿಗಳು ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ನಡೆಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.
