
ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಕಾಲೋನಿಯಲ್ಲಿರುವ ವಿವಿಐಪಿ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಯನ್ನು ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲನೆ ವೇಳೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾರ್ವಜನಿಕರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರೆಡ್ಡಿ ಅವರಿಗೆ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಅನಗತ್ಯ ವೆಚ್ಚ ಮಾಡಿ ಕೇವಲ ಗುತ್ತಿಗೆದಾರರ ವ್ಯಾಪಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬಾರದು ಎಂದು ತಾಕೀತು ಮಾಡಿದರು.
ಜುಲೈ ತಿಂಗಳೊಳಗೆ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
