ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳಿಗೆ ಸಹಕರಿಸಿ, ಮತದಾನದ ಹಕ್ಕು ಉಳಿಸಿಕೊಳ್ಳಿ – ಶಾಸಕ ಲಕ್ಷ್ಮಣ ಸವದಿ
ಅಥಣಿ, ಜು. 3: ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಭಾಗವಹಿಸಿ, ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಮನವಿ ಮಾಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಆಯೋಗವು ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವನ್ನು ಜೂನ್ 30ರಿಂದ ಜುಲೈ 29ರವರೆಗೆ ಹಮ್ಮಿಕೊಂಡಿದೆ. ಈ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಅಗತ್ಯ ನಮೂನೆಗಳನ್ನು (ಫಾರ್ಮ್) ವಿತರಿಸಲಿದ್ದಾರೆ. ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಯಾರಾದರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸದೇ ನಿರ್ಲಕ್ಷ್ಯ ವಹಿಸಿದರೆ, ಅವರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಬಹುದು. ಆದ್ದರಿಂದ ಯಾವುದೇ ನಿರ್ಲಕ್ಷ್ಯ ತೋರದೆ ಎಲ್ಲರೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದ್ದರಿಂದ ಜುಲೈ 29ರೊಳಗೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಶಾಸಕ ಲಕ್ಷ್ಮಣ ಸವದಿ ಸಾರ್ವಜನಿಕರಲ್ಲಿ ಮನವಿ ಮಾಡಿದರು..
