ಕೋಲಾರ: ಮಾಜಿ ಮುಖ್ಯಮಂತ್ರಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿರುವ ವಿಷಯ ಹೊರಬೀಳುತ್ತಿದ್ದಂತೆಯೇ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಕಳೆದೆರೆಡು ತಿಂಗಳಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆಂಬ ನಿರೀಕ್ಷೆಯಿಂದ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದ ಕಾರ್ಯಕರ್ತರು ಈಗ ಕೊತ್ತೂರು ಮಂಜುನಾಥ್‌ಗೆ ಟಿಕೆಟ್ ದೊರಕಿರುವುದಕ್ಕೆ ಭಾರೀ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶನಿವಾರ ಕಾಂಗ್ರೆಸ್ ಮೂರನೇ ಪಟ್ಟಿ ಹೊರಬೀಳುತ್ತಿದ್ದಂತೆಯೇ ಕೋಲಾರ
ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆಯೂ ಸಹ ನಡೆದಿದೆ. ಕಚೇರಿಯಲ್ಲಿದ್ದ ಪೀಠೋಪಕರಣಗಳು ಕಾರ್ಯಕರ್ತರ ಆಕ್ರೋಶಕ್ಕೆ ಪುಡಿಪುಡಿಯಾಗಿದೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್ ತಲೆಗೂ ಸಹ ಪೆಟ್ಟಾಗಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೊತ್ತೂರು ಮಂಜು ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಸಿದ್ದರಾಮಯ್ಯನವರಿಗೆ ಜೈಕಾರ ಹಾಕಿದ್ದಾರೆ.