ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಪುತ್ರನಿಗೆ ಟಿಕೆಟ್ ನಿರಾಕರಿಸಿದೆ. ಈ ಹಿನ್ನೆಲೆ ಮಾಜಿ ಸಚಿವ ರೋಷನ್ ಬೇಗ್ ತಮ್ಮ ಪುತ್ರ ರುಮಾರ್ ಬೇಗ್ ಅವರನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದ್ದಾರೆ ಎನ್ನಲಾಗುತ್ತಿದೆ.
ರೋಷನ್ ಬೇಗ್ ಭಾರತೀನಗರದ ನಿವಾಸದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದರು. ಈ ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಬಯಸುತ್ತಿಲ್ಲ. ನನ್ನ ಮಗ ಶಿವಾಜಿನಗರದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಆಸೆ. ಬಿಜೆಪಿಯಿಂದ ಟಿಕೆಟ್ ಪಡೆಯಲು ಪ್ರಯತ್ನಿಸಿದೆ. ಈ ಬಾರಿಯ ಚನಾವಣೆಯಲ್ಲಿ ಮುಸ್ಲಿಮರಿಗೆ ಎರಡು ಟಿಕೆಟ್ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಒಂದು ಹೈದರಾಬಾದ್-ಕರ್ನಾಟಕ ಪ್ರದೇಶದಿಂದ ಮತ್ತು ಮತ್ತೊಂದು ಶಿವಾಜಿನಗರದಿಂದ ನೀಡುವುದಾಗಿ ತಿಳಿಸಿತ್ತು. ಆದರೀಗ ಟಿಕೆಟ್ ನಿರಾಕರಿಸಿದೆ. ಹೀಗಾಗಿ ಪುತ್ರನನ್ನು ಸ್ವತಂತ್ರ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ರೋಷನ್ ಬೇಗ್ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಮಗನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ನನ್ನ ಮಗ ಚಿಕ್ಕವನು. ಆತ ಚುನಾವಣೆಗೆ ಸ್ಪರ್ಧಿಸಿದರೆ ಒಳ್ಳೆಯದು. ಒಂದೆರೆಡು ದಿನದಲ್ಲಿ ಸ್ಪಷ್ಟ ಚಿತ್ರಣ ಹೊರಬೀಳಲಿದ್ದು, ನಿರ್ಧಾರ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.
