Thursday, April 23, 2026
Homeಬೆಂಗಳೂರುಏ.24ರಿಂದ ಎಸೆಸೆಲ್ಸಿ ಮೌಲ್ಯಮಾಪನ ಆರಂಭ

ಏ.24ರಿಂದ ಎಸೆಸೆಲ್ಸಿ ಮೌಲ್ಯಮಾಪನ ಆರಂಭ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದು ಏಪ್ರಿಲ್ 24ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯಾದ್ಯಂತ ಒಟ್ಟು 236 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಪರೀಕ್ಷೆ ಬರೆದಿರುವ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (ಕೆಎಸ್‌ಇಎಬಿ) ನಿರ್ದೇಶಕ (ಪರೀಕ್ಷೆಗಳು) ಎಚ್‌.ಎನ್‌. ಗೋಪಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

ಮಾರ್ಚ್ 31ರಿಂದ ಎಸೆಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದವು. ಶನಿವಾರ ಸಮಾಜ ವಿಜ್ಞಾನ ಪರೀಕ್ಷೆ ಮುಕ್ತಾಯಗೊಳ್ಳುವುದರೊಂದಿಗೆ ಈ ವರ್ಷದ ಪರೀಕ್ಷೆ ಮುಕ್ತಾಯಗೊಂಡಿದೆ. ಬೆಳಗಾವಿ, ಕಲಬುರಗಿಯಲ್ಲಿ ನಕಲಿನ ಪ್ರಕರಣಗಳು ವರದಿಯಾಗಿದ್ದು ಹೊರತು ಪಡಿಸಿ ಉಳಿದಂತೆ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.

ಈ ಬಾರಿ ಪರೀಕ್ಷೆಗೆ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯಾಗಿ ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 3305 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎ.24ರಿಂದ ಮೌಲ್ಯಮಾಪನ ಆರಂಭಿಸಲು ನಿರ್ಧರಿಸಲಾಗಿದೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದ ಬಳಿಕ ಫ‌ಲಿತಾಂಶವನ್ನು ಕಂಪ್ಯೂಟರೀಕರಣಗೊಳಿಸಿ ಯಾವಾಗ ಪ್ರಕಟಿಸಬಹುದು ಎಂಬುದನ್ನು ಪರಿಶೀಲಿಸಿ ಫ‌ಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸುದ್ದಿ