Wednesday, July 1, 2026
Homeಜಿಲ್ಲಾ ಸುದ್ದಿಗಳುವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ: ಮನೆ ಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಣೆ ಆರಂಭ:...

ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ: ಮನೆ ಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಣೆ ಆರಂಭ: ತಹಸೀಲ್ದಾರ ಕೀರ್ತಿ ಚಾಲಕ್

ಮುದ್ದೇಬಿಹಾಳ: ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ–2026ರ ಅಂಗವಾಗಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ನೋಂದಣಿ ಮತ್ತು ಪರಿಷ್ಕರಣೆ ಕಾರ್ಯ ಪ್ರಾರಂಭವಾಗಿದೆ ಎಂದು ತಹಸೀಲ್ದಾರ ಕೀರ್ತಿ ಚಾಲಕ್‌ ತಿಳಿಸಿದರು.
ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನೆಡೆಸಿ ಮಾತನಾಡಿದ ಅವರು,
ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 246 ಮತಗಟ್ಟೆಗಳಿದ್ದು, ಕ್ಷೇತ್ರದಲ್ಲಿ 2,28,285 ಮತದಾರರು ಇದ್ದಾರೆ. ಈ ಪೈಕಿ 174 ಮತಗಟ್ಟೆಗಳು ಮುದ್ದೇಬಿಹಾಳ ತಾಲೂಕಿನಲ್ಲಿ, 62 ಮತಗಟ್ಟೆಗಳು ತಾಳಿಕೋಟೆ ತಾಲೂಕಿನಲ್ಲಿ ಹಾಗೂ 10 ಮತಗಟ್ಟೆಗಳು ನಿಡಗುಂದಿ ತಾಲೂಕಿನ ವ್ಯಾಪ್ತಿಗೆ ಸೇರಿವೆ.


ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮಗಳನ್ನು ವಿತರಿಸುವ ಕಾರ್ಯ ಕೈಗೊಂಡಿದ್ದಾರೆ.
ಜೂನ್ 30ರಂದು ಮೊದಲ ದಿನವೇ ಒಟ್ಟು 614 ಎನ್ಯೂಮರೇಷನ್ ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸಲಾಗಿದ್ದು, ಅವುಗಳಲ್ಲಿ 78 ಫಾರ್ಮ್‌ಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ತಿಳಿಸಿದರು.


ಮತದಾರರಿಗೆ ಈ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಲು ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿಯೂ ಬಿಎಲ್‌ಒ ಫೆಸಿಲಿಟಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಒಟ್ಟು 48 ಬಿಎಲ್‌ಒ ಫೆಸಿಲಿಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮತದಾರರು ಈ ಕೇಂದ್ರಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮತದಾರರ ನೊಂದಣಾಧಿಕಾರಿ ಹಾಗೂ ವಿಜಯಪುರದ ನಗರಾಭಿವೃದ್ಧಿ ಕೋಶ ಪುರ ಯೋಜನಾ ನಿರ್ಧೇಶಕ ಬದರುದ್ಧಿನ ಸೌದಾಗರ, ಮುದ್ದೇಬಿಹಾಳ ಪಟ್ಟಣ ವ್ಯಾಪ್ತಿಯಲ್ಲಿ ಒಟ್ಟು 29 ಮತಗಟ್ಟೆಗಳಿದ್ದು, ಆನ್‌ಲೈನ್ ಪ್ರಗತಿ ಮಾಹಿತಿಯ ಪ್ರಕಾರ 40 ಎನ್ಯೂಮರೇಷನ್ ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ 39 ಫಾರ್ಮ್‌ಗಳನ್ನು ಈಗಾಗಲೇ ಡಿಜಿಟಲೀಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮತದಾರರು ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ಹೆಚ್ಚಿನ ಸುದ್ದಿ