ವಿಜಯಪುರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಅಹೋರಾತ್ರಿ ಶ್ರಮಿಸಿರುವ ಹಿರಿಯ ಅಹಿಂದ ನಾಯಕ ಶರಣಪ್ಪ ಸುಣಗಾರ್ ಅವರಿಗೆ ಈ ಬಾರಿ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನ ನೀಡಬೇಕು ಎಂದು ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ ಸಮಿತಿಯ ತಾಲ್ಲೂಕು ಯುವ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಕಂಟೆಪ್ಪಗೋಳ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶರಣಪ್ಪ ಸುಣಗಾರ್ ಅವರು ಹತ್ತು ವರ್ಷಗಳ ಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಸಂಕಷ್ಟದ ಸಮಯದಲ್ಲಿಯೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಒಂದೆಡೆ ಸೇರಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಉಳಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಜಿಲ್ಲೆಯ ಎಲ್ಲಾ ಶಾಸಕರ ಗೆಲುವಿನಲ್ಲಿ ಅವರ ಪಾತ್ರ ದೊಡ್ಡದಿದೆ” ಎಂದು ತಿಳಿಸಿದ್ದಾರೆ.
“ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ತಳವಾರ ಮತ್ತು ಬುಡಕಟ್ಟು ಸಮುದಾಯಗಳ ಏಳಿಗೆಗಾಗಿ ಸುಣಗಾರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಈ ಸಮುದಾಯಗಳಿಗೆ ರಾಜಕೀಯ ನ್ಯಾಯ ಸಿಗಬೇಕಾದರೆ ಶರಣಪ್ಪ ಸುಣಗಾರ್ ಅವರಂತಹ ನಾಯಕರು ಶಾಸನ ಸಭೆಯಲ್ಲಿ ಇರಬೇಕಾದುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ರಾಜ್ಯ ಮತ್ತು ಕೇಂದ್ರದ ಕಾಂಗ್ರೆಸ್ ಹೈಕಮಾಂಡ್ ಕೂಡಲೇ ಈ ಬಗ್ಗೆ ಗಮನಹರಿಸಿ ಅವರಿಗೆ ಎಂಎಲ್‌ಸಿ ಸ್ಥಾನ ಘೋಷಿಸಬೇಕು” ಎಂದು ರಮೇಶ ಕಂಟೆಪ್ಪಗೋಳ ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು
